ಉಡುಪಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಬಿಜೆಪಿ ಕಾರ್ಯಕರ್ತರು ಸ್ವಚ್ಛಗೊಳಿಸುವ ಮೂಲಕ ಹಿರಿಯ ರಾಷ್ಟ್ರೀಯ ನಾಯಕನಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಸೆ.12ರಂದು ಉಡುಪಿಯಲ್ಲಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ತಿಳಿಸಿದರು.
ಬ್ರಹ್ಮಗಿರಿಯ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.12ರಂದು ಬೆಳಿಗ್ಗೆ 10.30ಕ್ಕೆ ಅಜ್ಜರಕಾಡಿನ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಲಾಗುವುದು. ರಾಜ್ಯದ 41 ಸ್ಥಳಗಳಲ್ಲಿ ಏಕಕಾಲದಲ್ಲಿ ಪ್ರತಿಭಟನೆ ನಡೆಯಲಿದೆ ಎಂದರು.
ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಸ್ವಚ್ಛಗೊಳಿಸಿರುವುದು ಬಿಜೆಪಿಯ ‘ಮನುವಾದಿ ಮನಸ್ಥಿತಿ’ಯನ್ನು ತೋರಿಸುತ್ತದೆ. ಮೊದಲು ಬಿಜೆಪಿ ಕಾರ್ಯಕರ್ತರು ತಮ್ಮ ಮನಸ್ಸಿನಲ್ಲಿರುವ ಮನುವಾದಿ ಕೊಳಕನ್ನು ಸ್ವಚ್ಛಗೊಳಿಸಿಕೊಳ್ಳಲಿ ಎಂದು ಅವರು ಟೀಕಿಸಿದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಮಾತನಾಡಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಬಿಜೆಪಿ ಕಾರ್ಯಕರ್ತರು ಶುದ್ಧೀಕರಿಸಿರುವುದು ದೇಶವನ್ನು 18ನೇ ಶತಮಾನಕ್ಕೆ ಕೊಂಡೊಯ್ಯುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ರಾಷ್ಟ್ರೀಯ ನಾಯಕನನ್ನು ಅವಮಾನಿಸುವ ಉದ್ದೇಶದಿಂದ ಈ ರೀತಿಯ ಕೃತ್ಯ ನಡೆಸಲಾಗಿದೆ. ಇದು ದೇಶದ 140 ಕೋಟಿ ಜನರಿಗೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನಕ್ಕೆ ಮಾಡಿದ ಅವಮಾನವಾಗಿದೆ. ಅಸ್ಪೃಶ್ಯತೆ ಮತ್ತು ಅಸಮಾನತೆಯನ್ನು ಮತ್ತೆ ಸೃಷ್ಟಿಸುವ ಪ್ರಯತ್ನಗಳನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಘಟನೆಯನ್ನು ಖಂಡಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಸೆ.12ರಂದು ರಾಜ್ಯದಾದ್ಯಂತ ಮೌನ ಮೆರವಣಿಗೆ ಹಾಗೂ ಪ್ರತಿಭಟನೆ ನಡೆಸಲಾಗುವುದು ಎಂದು ಸೊರಕೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲ್, ಪ್ರಚಾರ ಸಮಿತಿ ಪ್ರಮುಖರಾದ ಡಾ. ಸುಬ್ರಹ್ಮಣ್ಯ ಭಟ್, ಪ್ರಶಾಂತ್ ಪೂಜಾರಿ, ರಾಜೇಶ್ ಶೆಟ್ಟಿ, ದಿನಕರ್ ಶೆಟ್ಟಿ, ದಯಾನಂದ, ಚಂದ್ರಿಕಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

