ಉಡುಪಿ: ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್ಎಚ್ಎಂ) ಹಾಗೂ ಜಿಲ್ಲಾ ಪಂಚಾಯತ್ ಅನುದಾನದಡಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿಯಲ್ಲಿ ತಾರತಮ್ಯ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ತಿಂಗಳುಗಟ್ಟಲೆ ದುಡಿದರೂ ಸಕಾಲದಲ್ಲಿ ವೇತನ ದೊರೆಯುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಹಾಗೂ ಅಧೀನ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಈ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜಿಲ್ಲಾ ಪಂಚಾಯತ್ ಅನುದಾನದಡಿ 167 ಮಂದಿ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸುಮಾರು 200 ಮಂದಿ ಸಿಬ್ಬಂದಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇವರ ವೇತನ ಪಾವತಿಯಲ್ಲಿ ಅನಿಶ್ಚಿತತೆ ಮತ್ತು ತಾರತಮ್ಯ ಎಸಗಲಾಗುತ್ತಿದೆ ಎಂದು ಸಿಬ್ಬಂದಿ ದೂರಿದ್ದಾರೆ. ಸಿಬ್ಬಂದಿಯ ಆರೋಪದ ಪ್ರಕಾರ, ಬಹುತೇಕ ನೌಕರರಿಗೆ ಕಳೆದ ಆಗಸ್ಟ್ ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಇನ್ನು ಕೆಲವರಿಗೆ ಜುಲೈ ತಿಂಗಳಿನಿಂದಲೇ ಸಂಬಳ ಬಾಕಿ ಉಳಿದಿದೆ.
ವೇತನ ವಿಳಂಬದ ಜತೆಗೆ ನೌಕರರಿಗೆ ದೊರೆಯಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳಲ್ಲೂ ಲೋಪಗಳಾಗುತ್ತಿವೆ ಎಂಬ ಆರೋಪ ಕೇಳಿಬಂದಿದೆ. ವಿಶೇಷವಾಗಿ ಹೊಸದಾಗಿ ನೇಮಕಗೊಂಡಿರುವ ಸಿಬ್ಬಂದಿಗೆ ಇಎಸ್ಐ ಸೌಲಭ್ಯ ಕಲ್ಪಿಸಲಾಗುತ್ತಿಲ್ಲ. ಇಎಸ್ಐ ಸೌಲಭ್ಯ ಪಡೆಯಲು ಅಗತ್ಯವಿರುವ ಕೆಲಸದ ಪ್ರಮಾಣಪತ್ರ, ಸಂಬಂಧಪಟ್ಟ ದಾಖಲೆಗಳು ಹಾಗೂ ಏಜೆನ್ಸಿಯ ದೃಢೀಕರಣವನ್ನು ಒದಗಿಸಬೇಕಾಗುತ್ತದೆ.
ಆದರೆ ಹೊರಗುತ್ತಿಗೆ ಏಜೆನ್ಸಿಯು ಅಗತ್ಯ ದಾಖಲೆಗಳನ್ನು ಸಮರ್ಪಕವಾಗಿ ನೀಡದಿರುವುದರಿಂದ ನೌಕರರು ಇಎಸ್ಐ ಸೌಲಭ್ಯ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ ಎಂಬುದು ಸಿಬ್ಬಂದಿಯ ಅಳಲು. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ನೌಕರರು ಒತ್ತಾಯ ಮಾಡಿದ್ದಾರೆ.

