ಉಡುಪಿ: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವುದನ್ನು ಖಂಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್, ಇಡಿ, ಆದಾಯ ತೆರಿಗೆ ಇಲಾಖೆ ಹಾಗೂ ಸಿಬಿಐ ಸಂಸ್ಥೆಗಳು ಬಿಜೆಪಿಯ ರಾಜಕೀಯ ಅಜೆಂಡಾದಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಆರೋಪಿಸಿದರು.

ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯ ಯುವ ಮೋರ್ಚಾ ಹಾಗೂ ಎಬಿವಿಪಿ ಹೇಗೆ ಪಕ್ಷದ ಅಜೆಂಡಾವನ್ನು ಮುನ್ನಡೆಸುತ್ತವೆಯೋ, ಅದೇ ರೀತಿ ತನಿಖಾ ಸಂಸ್ಥೆಗಳನ್ನೂ ಬಳಸಿಕೊಳ್ಳಲಾಗುತ್ತಿದೆ.

ರಾಜಕೀಯವಾಗಿ ಯಾರನ್ನು ದುರ್ಬಲಗೊಳಿಸಬೇಕು, ಯಾರನ್ನು ಸೋಲಿಸಬೇಕು ಎಂಬ ಗುರಿಯೊಂದಿಗೆ ದಾಳಿಗಳು ನಡೆಯುತ್ತಿವೆ’ ಎಂದು ದೂರಿದರು. ರಾಜಕೀಯ ಎದುರಾಳಿಗಳನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುವ ಪ್ರವೃತ್ತಿ ಮುಂದುವರಿದಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಒಳ್ಳೆಯ ಬೆಳವಣಿಗೆಯಲ್ಲ ಎಂದರು.

‘ಬಿಜೆಪಿ ಪಾದಯಾತ್ರೆಗೆ ಸ್ಪಷ್ಟ ಉದ್ದೇಶವೇ ಇಲ್ಲ’:

ಬಳ್ಳಾರಿಯಲ್ಲಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯನ್ನೂ ಟೀಕಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷ ಸ್ಥಾನ ತಪ್ಪಿಹೋಗುವ ಭೀತಿಯಿಂದಲೇ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ವ್ಯಂಗ್ಯವಾಡಿದರು.

‘ತಮ್ಮ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯತ್ನಾಳ್ ಅವರೇ ಹೇಳಿದ್ದಾರೆ. ಯಾವ ವಿಚಾರಕ್ಕಾಗಿ ಪಾದಯಾತ್ರೆ ನಡೆಸುವುದಾಗಿ ಹೇಳಲಾಗಿತ್ತೋ, ಆ ವಿಚಾರವೇ ಈಗ ಇಲ್ಲ. ನಿರ್ದಿಷ್ಟ ವಿಚಾರವಿಲ್ಲದೆ ಪಾದಯಾತ್ರೆ ನಡೆಸುತ್ತಿರುವುದು ರಾಜ್ಯದ ಇತಿಹಾಸದಲ್ಲೇ ಅಪರೂಪ’ ಎಂದು ಟೀಕಿಸಿದರು.

ರಾಜ್ಯದಲ್ಲಿ ಬರಗಾಲದಂತಹ ಪರಿಸ್ಥಿತಿ ಎದುರಾಗಿದ್ದು, ಈ ಸಂದರ್ಭದಲ್ಲಿ ಜನರ ಸಮಸ್ಯೆಗಳತ್ತ ಗಮನ ಹರಿಸಬೇಕಾದ ಬಿಜೆಪಿ ರಾಜಕೀಯ ಉದ್ದೇಶದಿಂದ ಪಾದಯಾತ್ರೆ ನಡೆಸುತ್ತಿದೆ. ಜನರು ಕಾಂಗ್ರೆಸ್ ಸರ್ಕಾರಕ್ಕೆ ಐದು ವರ್ಷ ಆಡಳಿತ ನಡೆಸುವ ಅವಕಾಶ ನೀಡಿದ್ದಾರೆ. ಅವಧಿ ಪೂರ್ಣಗೊಂಡ ಬಳಿಕ ಮತ್ತೆ ಜನರ ಮುಂದೆ ಹೋಗಿ ಚುನಾವಣೆಯನ್ನು ಎದುರಿಸುತ್ತೇವೆ ಎಂದರು.

ವಿಪಕ್ಷ ನಾಯಕ ಆರ್. ಅಶೋಕ್ ಅವರ ಇಂದಿರಾ ಕಿಟ್ ಕುರಿತ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯೋಜನೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದ್ದು, ಮತ್ತೆ ಆರಂಭಿಸುವ ಕುರಿತು ಸೂಚನೆ ನೀಡಲಾಗಿದೆ ಎಂದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವೇನು ಎಂಬುದನ್ನು ಬಿಜೆಪಿ ನಾಯಕರು ಪ್ರಶ್ನಿಸಬೇಕು ಎಂದು ತಿರುಗೇಟು ನೀಡಿದರು.

ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಲು ಸಾಧ್ಯವಾಗದ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಅವರು ದೂರಿದರು.