ಉಡುಪಿ: ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಸೋಮವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಕಡಲ್ಕೊರೆತ ಸಮಸ್ಯೆಯನ್ನು ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸಲಾಗುವುದು. ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಕಡಲ್ಕೊರೆತದಿಂದ ಸ್ಥಳೀಯರ ಬದುಕಿನ ಜತೆಗೆ ಕರಾವಳಿ ಪ್ರವಾಸೋದ್ಯಮಕ್ಕೂ ಹೊಡೆತ ಬೀಳುವ ಆತಂಕವಿದೆ. ಈ ವಿಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತರಲಾಗುವುದು ಎಂದರು.
ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಆದರೆ, ಕಡಲತೀರ ಪ್ರದೇಶದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಿಸಲು ಅವಕಾಶ ನೀಡುವುದಿಲ್ಲ. ನಿಯಮ ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸರ್ಕಾರಿ ಜಾಗ ಅತಿಕ್ರಮಣಕ್ಕೂ ಅವಕಾಶವಿಲ್ಲ. ಅತಿಕ್ರಮಣ ಪ್ರಕರಣಗಳು ಕಂಡುಬಂದರೆ ಅಪರ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

