ಉಡುಪಿ: ಶನಿವಾರ ಮಧ್ಯಾಹ್ನ ಸುರಿದ ಭಾರೀ ಗಾಳಿ–ಮಳೆಗೆ ಚಿಟ್ಪಾಡಿ ಸಮೀಪದ ವಿಜಯ ವೀರ ಸಂಘ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ, ಮೂರಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧಾರಾಶಾಯಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಮರ ಉರುಳಿದ ಪರಿಣಾಮ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಮಾಹಿತಿ ತಿಳಿದ ಸ್ಥಳೀಯ ಯುವಕರು ಹಾಗೂ ಎನ್‌ಎಸ್‌ಯುಐ ಜಿಲ್ಲಾ ಉಪಾಧ್ಯಕ್ಷ ಶರತ್ ಕುಂದರ್ ಅವರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು. ಬಳಿಕ ಸ್ಥಳೀಯರು ಹಾಗೂ ವಿಜಯ ವೀರ ಸಂಘದ ಸದಸ್ಯರ ಸಹಕಾರದಿಂದ ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಯಿತು.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ವಿದ್ಯುತ್ ಕಂಬಗಳು ಹಾನಿಗೊಳಗಾದ ಹಿನ್ನೆಲೆಯಲ್ಲಿ ವಿದ್ಯುತ್ ಇಲಾಖೆ ಸಿಬ್ಬಂದಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.