ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಅದರಲ್ಲೂ ವಿಶೇಷವಾಗಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರಲಾಗಿದ್ದು, ಯೋಜನೆಗಳ ಸೌಲಭ್ಯ ಹಾಗೂ ಲಾಭ ಎಲ್ಲಾ ಅರ್ಹರಿಗೂ ದೊರಕುವಂತೆ ಮಾಡಲು ಸಮಿತಿ ಪ್ರಯತ್ನ ನಡೆಸುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.
ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯಾದ ಕುಟುಂಬದ ಯಜಮಾನಿ ಮರಣ ಹೊಂದಿದ್ದಲ್ಲಿ ಯಜಮಾ ನಿಯ ಬದಲಾವಣೆಗೆ, ಹೊಸ ಮನೆ ನಿರ್ಮಾಣವಾದಾಗ ಹೊಸ ಅರ್ಜಿಯ ಸೇರ್ಪಡೆಗೆ, ರೇಷನ್ ಕಾರ್ಡ್ ಇಲ್ಲದವರಿಗೆ ಹೊಸದಾಗಿ ರೇಷನ್ ಕಾರ್ಡ್ ಪಡೆದು ಗೃಹಲಕ್ಷ್ಮೀ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿ ಸಲು ಸದ್ಯ ತಂತ್ರಾಂಶದಲ್ಲಿ ಅವಕಾಶವಿಲ್ಲ. ಈ ಎಲ್ಲಾ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತಂದು ಜಿಲ್ಲೆಯ ಎಲ್ಲಾ ಅರ್ಹರಿಗೂ ಯೋಜನೆಯ ಲಾಭ ಸಿಗುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾದವರಲ್ಲಿ ಐಟಿ ಮತ್ತು ಜಿಎಸ್‌ಟಿ ಪಾವತಿದಾರರು ಎಂಬ ಕಾರಣಕ್ಕಾಗಿ ಸುಮಾರು 5000 ದಷ್ಟು ಫಲಾನುಭವಿಗಳು ಈಗಾಗಲೇ ಸೌಲಭ್ಯದಿಂದ ವಂಚಿತರಾಗಿ ದ್ದಾರೆ. ಜಿಲ್ಲೆಯಲ್ಲಿ ಐಟಿ, ಜಿಎಸ್‌ಟಿ, ಇ-ಕೆವೈಸಿ ಮ್ಯಾಪಿಂಗ್ ಸೇರಿದಂತೆ ವಿವಿಧ ಕಾರಣಗಳಿಗಾಗಿ ಒಟ್ಟು 7151 ಫಲಾನುಭವಿಗಳ ಅರ್ಜಿಗಳು ಬಾಕಿ ಇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶ್ಯಾಮಲಾ ಅವರು ಮಾಹಿತಿ ನೀಡಿದರು. ಈ ಬಗ್ಗೆ ಪರಿಶೀಲಿಸಿ ಅರ್ಹರಿದ್ದಲ್ಲಿ ಅವರಿಗೂ ಗ್ಯಾರಂಟಿ ಯೋಜನೆ ತಲುಪಿಸಬೇಕೆಂದು ಕೊಡವೂರು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಸರಕಾರದ ಎಲ್ಲಾ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಈ ಮೂಲಕ ಜಿಲ್ಲೆಯ ಪ್ರತಿಯೊಬ್ಬ ಅರ್ಹರಿಗೂ ಇವುಗಳ ಪ್ರಯೋಜನ ಸಿಗುವಂತಾಗಬೇಕು. ಪಂಚ ಗ್ಯಾರಂಟಿ ಯೋಜನೆ ಜಿಲ್ಲೆಯಲ್ಲಿ ಬಹುತೇಕ ಅರ್ಹ ಫಲಾನುಭವಿಗಳಿಗೆ ಸಿಗುತ್ತಿದೆ. ಆದರೂ ಅರ್ಜಿ ಸಲ್ಲಿಸಿದ ಕೆಲವರಿಗೆ ತಾಂತ್ರಿಕ ಕಾರಣಗಳಿಂದಾಗಿ ಸಮಸ್ಯೆಗಳಾಗುತ್ತಿವೆ. ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿಸಿ ಅರ್ಹರಿದ್ದಲ್ಲಿ ಅವರಿಗೂ ಇದರ ಲಾಭ ಸಿಗುವಂತೆ ನೋಡಿಕೊಳ್ಳಬೇಕು ಎಂದು ಅಶೋಕ್‌ಕುಮಾರ್ ಕೊಡವೂರು ತಿಳಿಸಿದರು.
ಇದಕ್ಕೆ ಉತ್ತರಿಸಿದ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಇದೇ ಕಾರಣಕ್ಕಾಗಿ ಒಬ್ಬ ಅಧಿಕಾರಿಯನ್ನು ಪಂಚ ಗ್ಯಾರಂಟಿ ಯೋಜನೆಗಳ ನೋಡೆಲ್ ಅಧಿಕಾರಿಯಾಗಿ ನಿಯುಕ್ತಿಗೊಳಿಸಲಾಗುವುದು. ರಾಮದಾಸ್ ಅವರನ್ನು ಗ್ಯಾರಂಟಿ ಯೋಜನೆ ಜಿಲ್ಲಾ ನೋಡೆಲ್ ಅಧಿಕಾರಿಯಾಗಿ ನೇಮಿಸಿದ್ದು, ಎಲ್ಲಾ ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಯೋಜನೆಗಳ ಕುರಿತು ಯಾವುದೇ ಸಮಸ್ಯೆಯನ್ನು ಅವರ ಗಮನಕ್ಕೆ ತರಬಹುದು. ಅವರು ಸಂಬಂಧಿತ ಇಲಾಖೆಯನ್ನು ಸಂಪರ್ಕಿಸಿ ಅದನ್ನು ಬಗೆಹರಿಸಲು ಪ್ರಯತ್ನಿಸುವರು ಎಂದರು.

