ಉಡುಪಿ: ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯುವಲ್ಲಿ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಬಳಿಗೆ ತೆರಳಿ ಸಮಸ್ಯೆ ಆಲಿಸಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.

ಅಂಬಲಪಾಡಿ ಗ್ರಾಮದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ನಡೆದ ಪ್ರಜಾ ಸೇವೆ ಆಂದೋಲನ ಸಭೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಅಧಿಕಾರಿಗಳು ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹರಿಸಲು ಕ್ರಮ ಕೈಗೊಳ್ಳಬೇಕು. ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಅವರು ಹೇಳಿದರು.

ಸಭೆಯಲ್ಲಿ ಸುಮಾರು 15 ಮಂದಿ ತಮ್ಮ ವಿವಿಧ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು. ಪಿಂಚಣಿ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಅಹವಾಲು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನದ ಉಡುಪಿ ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.