ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಸೆ.13ರಂದು ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಲಾಗಿದೆ ಎಂದು ಉಡುಪಿ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್. ಗಂಗಣ್ಣನವರ್ ತಿಳಿಸಿದ್ದಾರೆ.
ಉಡುಪಿ ನ್ಯಾಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ನ್ಯಾಯಾಲಯ ಗಳಲ್ಲಿ ಒಟ್ಟು 36070 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಇದರಲ್ಲಿ ಈ ಬಾರಿಯ ಲೋಕ ಅದಾಲತ್ನಲ್ಲಿ 5581 ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ ಗಳನ್ನು ಇತ್ಯರ್ಥಗೊಳಿಸಲು ಗುರುತಿಸಲಾಗಿದೆ. ಕಳೆದ ಬಾರಿ ಜುಲೈ 12ರಂದು ನಡೆದ ಅದಾಲತ್ನಲ್ಲಿ ಒಟ್ಟು 48120 ಪ್ರಕರಣಗಳನ್ನು ಇತ್ಯರ್ಥ ಗೊಳಿಸಲಾಗಿದೆ ಎಂದರು.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಲೋಕ ಅದಾಲತ್ ಉತ್ತಮ ಅವಕಾಶವಾಗಿದೆ. ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎಂ.ಡಿ.ಆರ್. ಪ್ರಕರಣ, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್/ಸಾಲದ ವಸೂಲಾತಿ ಪ್ರಕರಣಗಳು, ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು,
ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಷೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯಗಳ ಪ್ರಕರಣಗಳು (ವಿಚ್ಛೇದನವನ್ನು ಹೊರತುಪಡಿಸಿ), ಭೂ ಸ್ವಾಧೀನ ಪರಿಹಾರ ಪ್ರಕರಣಗಳು, ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣ ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳ ಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಿಕೊಳ್ಳಲಾಗು ವುದು. ನ್ಯಾಯಾಲಯದಲ್ಲಿ ದಾಖ ಲಾಗದೇ ಇರುವ ಪ್ರಕರಣಗಳನ್ನೂ ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾ ಗುವುದು.
ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಉಪಸ್ಥಿತರಿದ್ದರು.

