ಉಡುಪಿ: ಉಡುಪಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಉಡುಪಿ ತಾಪಂ ಆಡಳಿತಾಧಿಕಾರಿಯಾಗಿರುವ ಉಡುಪಿ ಭೂ ಕಂದಾಯ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ಬುಧವಾರ ನಡೆಯಿತು.
ವಸತಿ ಯೋಜನೆಯ ನೋಡಲ್ ಅಧಿಕಾರಿ ಅಶೋಕ್ ಮಾತನಾಡಿ, ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಸಂಬಂಧಿಸಿ ಪ್ರತಿ ಗ್ರಾಪಂ ಮಟ್ಟದಲ್ಲಿ ಒಬ್ಬ ಸರ್ವೆಯರ್‌ನ್ನು ನಿಯೋಜಿಸಲಾಗಿದೆ. ಈ ಯೋಜನೆಯಲ್ಲಿ ಎಸ್ಸಿಎಸ್ಟಿ ಗಳಿಗೆ 1.75ಲಕ್ಷ ರೂ. ನೀಡಲಾಗುತ್ತದೆ. ನರೇಗಾ ಯೋಜನೆಯಲ್ಲಿ 30 ದಿನಗಳ ಕೆಲಸಕ್ಕೆ ಅವಕಾಶ ಇದ್ದು, ಇದರಲ್ಲಿ 33ಸಾವಿರ ರೂ. ದೊರೆಯುತ್ತದೆ.
ನರೇಗಾಕ್ಕೆ ಜಾಬ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಒಟ್ಟು 5 ವರ್ಷದ ಯೋಜನೆ ಇದಾಗಿದೆ. ಸಾಮಾನ್ಯ ಜನರಿಗೆ 1.20ಲಕ್ಷ ರೂ. ಬಿಡುಗಡೆಯಾಗುತ್ತದೆ. ಮಾರ್ಚ್‌ನಿಂದ ಸಮೀಕ್ಷೆ ಆರಂಭವಾಗಿದ್ದು, ಮೇ 15 ಕೊನೆಯ ದಿನವಾಗಿದೆ. ಸಾರ್ವಜನಿಕರು ಕೂಡ ಆ್ಯಪ್ ಮೂಲಕ ಸಮೀಕ್ಷೆ ಮಾಡಿಕೊಳ್ಳಬಹುದು ಎಂದು ತಿಳಿಸಿದರು.
ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯ ಮಾತನಾಡಿ, ಇನ್ನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಸೊಳ್ಳೆಗಳ ನಿಯಂತ್ರಣದ ಕುರಿತು ಮನೆಮನೆಗಳಿಗೆ ಭೇಟಿ ನೀಡಿ ಮಾಹಿತಿ ನೀಡಲಾಗುತ್ತಿದೆ. ಈ ಸಂಬಂಧ ನಗರ ಪ್ರದೇಶದಲ್ಲಿರುವ ವಲಸೆ ಕಾರ್ಮಿಕರ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ರೋಗದ ಲಕ್ಷ್ಮಣ ಕಂಡುಬರುವ ಕಾರ್ಮಿಕರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಮಳೆ ಹಾಗೂ ನೆರೆಯ ಹಿನ್ನೆಲೆಯಲ್ಲಿ ಇಲಾಖೆಯಿಂದ ಕ್ರಿಯಾ ಯೋಜನೆ ಯನ್ನು ತಯಾರಿಸಲಾಗಿದ್ದು, ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಲಾಗಿದೆ. ನೆರೆಯಿಂದಾಗಿ ವಾಂತಿಬೇಧಿಯಂತಹ ಕಾಯಿಲೆಗಳು ಕಂಡುಬರುವುದರಿಂದ ಆರೋಗ್ಯ ಕಾರ್ಯಕರ್ತರನ್ನು ಸಜ್ಜು ಮಾಡಲಾಗಿದೆ ಎಂದು ಅವರು ತಿಳಿಸಿದರು. ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

