ಉಡುಪಿ: ಕೇಂದ್ರ ಸರ್ಕಾರವು ಸ್ಪೆಷಲ್ ಇಂಟೆನ್ಸಿವ್ ರಿವಿಷನ್ (ಎಸ್‌ಐಆರ್) ಪ್ರಕ್ರಿಯೆ ಹೊರತುಪಡಿಸಿ ಜನಪರವಾದ ಯಾವುದೇ ಮಹತ್ವದ ಕಾರ್ಯಗಳನ್ನು ಮಾಡಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೀಗ ವಿದೇಶಗಳ ರಾಜಕೀಯ ಬೆಳವಣಿಗೆಗಳನ್ನು ಗಮನಿಸುತ್ತಿರಬಹುದು. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉತ್ತಮ ಸ್ನೇಹ ಸಂಬಂಧ ಹೊಂದಿದ್ದರೂ, ಅಲ್ಲಿನ ರಾಜಕೀಯ ಬೆಳವಣಿಗೆಗಳು ಬೇರೆಯದೇ ಸಂದೇಶ ನೀಡುತ್ತಿವೆ. ಇಸ್ರೇಲ್ ಸೇರಿದಂತೆ ವಿವಿಧ ದೇಶಗಳಲ್ಲಿನ ರಾಜಕೀಯ ಬೆಳವಣಿಗೆಗಳು ಆಡಳಿತ ಪಕ್ಷಗಳಿಗೆ ಎಚ್ಚರಿಕೆಯ ಸಂದೇಶವಾಗಿವೆ ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ಅವರು ಸಾಲಿಗ್ರಾಮದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಲಾದ ಪ್ರತಿಭಟನೆ ಸಭೆಯನ್ನುದ್ದೇಶಿಸಿ ಮಾಧ್ಯಮಗಳ ಜವಾಬ್ದಾರಿಯನ್ನು ಪ್ರಸ್ತಾಪಿಸಿದ ಅವರು, ಮಾಧ್ಯಮಗಳು ಜನರಿಗೆ ಸತ್ಯಾಂಶಗಳನ್ನು ತಿಳಿಸುವ ಕೆಲಸ ಮಾಡಬೇಕೇ ಹೊರತು, ಸರ್ಕಾರಕ್ಕೆ ಏನು ಬೇಕೋ ಅದನ್ನೇ ಜನರಿಗೆ ತಲುಪಿಸುವ ಪ್ರಯತ್ನ ಮಾಡಬಾರದು. ಮಾಧ್ಯಮಗಳು ತಮ್ಮ ಅಭಿಪ್ರಾಯಗಳನ್ನು ಸಂಪಾದಕೀಯಗಳಲ್ಲಿ ವ್ಯಕ್ತಪಡಿಸಬಹುದು.

ಆದರೆ ಅಭಿಪ್ರಾಯಗಳನ್ನು ಸುದ್ದಿಯ ರೂಪದಲ್ಲಿ ಬಿಂಬಿಸುವುದು ಸರಿಯಲ್ಲ. ಇತ್ತೀಚಿನ ದಿನಗಳಲ್ಲಿ ಇಂತಹ ಪ್ರವೃತ್ತಿ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ಕೆಲವು ಮುದ್ರಣ ಮಾಧ್ಯಮಗಳಲ್ಲಿಯೂ ಮುಂದುವರಿದಿದೆ. ಮಾಧ್ಯಮಗಳು ತಮ್ಮ ವೃತ್ತಿಪರ ಜವಾಬ್ದಾರಿಯನ್ನು ಅರಿತು, ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಮ್ಮ ಪೂಜಾರಿ, ಮಹಿಳಾ ಕಾಂಗ್ರೆಸ್‌ ಮುಖಂಡರಾದ ಜ್ಯೋತಿ ಹೆಬ್ಬಾರ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಸಭೆಗೂ ಮೊದಲು ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಆರಂಭಗೊಂಡ ರ‍್ಯಾಲಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿಯೇ ಸಾಗಿ ಬಂದು ಸಾಲಿಗ್ರಾಮದ ಮುಖ್ಯ ಬೀದಿಯಲ್ಲಿ ಸಾಗಿ, ಮರಳಿ ಸಾಲಿಗ್ರಾಮ ಬಸ್ ನಿಲ್ದಾಣದ ಬಳಿ ಸಮಾಪನಗೊಂಡಿತು. ಬಳಿಕ ನಡೆದ ಪ್ರತಿಭಟನಾ ಸಭೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡರು.