ಉಡುಪಿ: ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಡೆದಿರುವ ನಿರಂತರ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ದಲಿತರ ಭೂಮಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ (DHS) ರಾಜ್ಯ ಸಮಿತಿ ಕರೆ ನೀಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಸೋಮವಾರ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.
ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಸಮಿತಿ, ಸಿಐಟಿಯು, ಜನವಾದಿ ಮಹಿಳಾ ಸಂಘಟನೆ (JMS), ಡಿವೈಎಫ್ಐ, ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ, ಕೃಷಿಕೂಲಿಕಾರರ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಬಳಿಕ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಗೆ ಕಡಿವಾಣ ಹಾಕಬೇಕು. ಪ್ರಕರಣಗಳ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ದಲಿತರಿಗೆ ಸಂಬಂಧಿಸಿದ ಭೂಮಿ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಭೂಹಕ್ಕುಗಳನ್ನು ರಕ್ಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು, ಕಾರ್ಯದರ್ಶಿ ರವಿ ವಿ.ಎಂ., ಮುಖಂಡರಾದ ಅಶ್ವಿನಿ ಲಾರೆನ್ಸ್ ಮೂಡುಬೆಳ್ಳೆ, ಮನೋಜ್ ಕುಮಾರ್, ನಾಗರತ್ನ ಆರ್. ನಾಡ, ಸುಶೀಲಾ ಬಳ್ಕೂರು, ಅಣ್ಣಪ್ಪ ಬಳ್ಕೂರು, ಬಾಬು ಬಳ್ಕೂರು, ದಯಾನಂದ ಮಲ್ಪೆ, ರಾಮ ಕಾರ್ಕಡ, ಸಿಐಟಿಯು ಜಿಲ್ಲಾ ಅಧ್ಯಕ್ಷ ಶಶಿಧರ ಗೊಲ್ಲ, ಕಾರ್ಯದರ್ಶಿ ಚಂದ್ರಶೇಖರ ವಿ., ಕೋಶಾಧಿಕಾರಿ ಕವಿರಾಜ್ ಎಸ್. ಕಾಂಚನ್,
ಉಪಾಧ್ಯಕ್ಷ ಎಚ್. ನರಸಿಂಹ, ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಡಿವೈಎಫ್ಐ ಮುಖಂಡರಾದ ಸೈಯಾದ್, ಮುರಳಿ, ಜನವಾದಿ ಮಹಿಳಾ ಸಂಘದ ಜಿಲ್ಲಾ ಕಾರ್ಯದರ್ಶಿ ಶೀಲಾವತಿ, ಮುಖಂಡರಾದ ಬಲ್ಕೀಸ್, ಸುನೀತಾ ಶೆಟ್ಟಿ, ಕೃಷಿಕೂಲಿಕಾರರ ಸಂಘದ ಮುಖಂಡರಾದ ನಾಗರತ್ನ ನಾಡ, ಇದ್ರೀಸ್ ಹೂಡೆ, ಹಯವದನ ಮೂಡುಸಗ್ರಿ ಮತ್ತಿತರರು ಉಪಸ್ಥಿತರಿದ್ದರು.

