ಉಡುಪಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಅರ್ಹ ಮತದಾರರ ಮತದಾನದ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ನಗರದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಬುಧವಾರ ಬೃಹತ್ ಪ್ರತಿಭಟನಾ ಧರಣಿ ನಡೆಯಿತು.

ಎಸ್‌ಐಆರ್‌ ಪ್ರಕ್ರಿಯೆಯಿಂದ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಆತಂಕವಿದ್ದು, ಸಂವಿಧಾನ ನೀಡಿರುವ ಮತದಾನದ ಹಕ್ಕಿಗೆ ಧಕ್ಕೆಯಾಗಬಾರದು. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ಮುಖಂಡ ಹನೀಫ್ ಮುಳೂರು, ‘ಜಂತರ್ ಮಂತರ್’ ಧ್ಯೇಯವಾಕ್ಯದೊಂದಿಗೆ ದೇಶಾದ್ಯಂತ ಎಸ್‌ಐಆರ್‌ ವಿರೋಧಿ ಹೋರಾಟ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ 65 ಲಕ್ಷ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಅವರೆಲ್ಲರನ್ನೂ ಮರು ಸೇರ್ಪಡೆಗೊಳಿಸಬೇಕು. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸುವ ಉದ್ದೇಶದಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ಇಬ್ಬರು ಚುನಾವಣಾ ಆಯುಕ್ತರ ಆಕ್ಷೇಪದ ನಡುವೆಯೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಎಸ್‌ಐಆರ್‌ ಪ್ರಕ್ರಿಯೆ ಜಾರಿಗೊಳಿಸಿರುವುದು ಸಂವಿಧಾನ ವಿರೋಧಿ ನಡೆ ಎಂದು ಆರೋಪಿಸಿದರು. ಜಾತ್ಯತೀತ ಮತದಾರರನ್ನು ಪಟ್ಟಿಯಿಂದ ಹೊರಗಿಟ್ಟು, ಬಿಜೆಪಿ ಬೆಂಬಲಿತ ಮತದಾರರನ್ನು ಮಾತ್ರ ಸೇರ್ಪಡೆಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವೂ ಆರೋಪ ವ್ಯಕ್ತಪಡಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಯಾವುದೇ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು. ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಮೂಲಕ ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಉಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು, ಎಸ್‌ಡಿಟಿಯು ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ವಿಮೆನ್ ಇಂಡಿಯಾ ಮೂವ್‌ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್, ಯಂಗ್ ಡೆಮಾಕ್ರಟ್ಸ್ ರಾಜ್ಯ ಸಂಘಟನಾ ಸಮಿತಿ ಸದಸ್ಯ ಜಯರಾಜ್ ಹಾದಿಗೆ ಹಾಗೂ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಹಿದ್ ಆಲಿ ಸೇರಿದಂತೆ ಪಕ್ಷದ ರಾಜ್ಯ ಮತ್ತು ಜಿಲ್ಲಾ ಮಟ್ಟದ ಮುಖಂಡರು ಭಾಗವಹಿಸಿದ್ದರು.