ಉಡುಪಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಗುಲ್ವಾಡಿ ಟಾಕೀಸ್, ಉಡುಪಿ ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಕೋಟ ಉಸಿರು ಅಧ್ಯಯನ ತರಬೇತಿ ಕೇಂದ್ರ ಇದರ ಸಂಯುಕ್ತ ಆಶ್ರಯದಲ್ಲಿ “ಮಹಿಳಾ ಸಾಮಾಜಿಕ ಸ್ಥಿತ್ಯಂತರಗಳು” ಎಂಬ ವಿಷಯದ ಕುರಿತ ವಿಚಾರಗೋಷ್ಠಿ ಹಾಗೂ ಗುಲ್ವಾಡಿ ವೆಂಕಟರಾವ್ ಪ್ರಶಸ್ತಿ ಮತ್ತು ಸಂತೋಷ್ ಕುಮಾರ್ ಗುಲ್ವಾಡಿ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಸೆ.13ರಂದು ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಬೆಳಿಗ್ಗೆ 11.15ಕ್ಕೆ 2024ನೇ ಸಾಲಿನ ಗುಲ್ವಾಡಿ ವೆಂಕಟರಾವ್ ಪ್ರಶಸ್ತಿಯನ್ನು ಕವಿ, ಲೇಖಕಿ ಮತ್ತು ಹಿರಿಯ ಪೊಲೀಸ್ ಅಧಿಕಾರಿ ಧರಣಿದೇವಿ ಮಾಲಗತ್ತಿ ಅವರಿಗೆ ಹಾಗೂ ಸಂತೋಷ್ ಕುಮಾರ್ ಗುಲ್ವಾಡಿ ಪ್ರಶಸ್ತಿಯನ್ನು ಲೇಖಕ, ವಾಣಿಜ್ಯ ತೆರಿಗೆಗಳ ಉಪ ಆಯುಕ್ತ ಮೊಹಮ್ಮದ್ ರಫೀ ಪಾಷ ಅವರಿಗೆ ಪ್ರದಾನ ಮಾಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಗುಲ್ವಾಡಿ ಟಾಕೀಸ್ ನ ಯಾಕೂಬ್ ಖಾದರ್ ಗುಲ್ವಾಡಿ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ನರಸಿಂಹ ಮೂರ್ತಿ ಇದ್ದರು.

