ಉಡುಪಿ: ಕರಾವಳಿಯ ಸಮಗ್ರ ಅಭಿವೃದ್ಧಿ ಹಾಗೂ ಈ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.
ಉಡುಪಿಗೆ ಭೇಟಿ ನೀಡಿದ ಸಚಿವರನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಬಳಿಕ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಯಾವೆಲ್ಲ ವಿಷಯಗಳ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದು ಸಭೆಯಲ್ಲೇ ನಿರ್ಧಾರವಾಗಲಿದೆ. ಸಭೆ ಎರಡು ಗಂಟೆ ನಡೆಯಬಹುದು ಅಥವಾ ಸಂಜೆವರೆಗೂ ಮುಂದುವರಿಯಬಹುದು ಎಂದರು.
ಈಗಾಗಲೇ ಬಂದರು, ಮೀನು ಮಾರುಕಟ್ಟೆ ಹಾಗೂ ಜಟ್ಟಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಡದೋಣಿ ಮೀನುಗಾರರು ಹಾಗೂ ಕಾರ್ಮಿಕರ ಬೇಡಿಕೆ, ಸಮಸ್ಯೆಗಳನ್ನು ಆಲಿಸಿದ್ದೇನೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸಭೆ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಆಲಿಸುವುದಾಗಿ ತಿಳಿಸಿದರು.
ಕರಾವಳಿ ಭಾಗದಲ್ಲಿ ಬ್ರೇಕ್‌ವಾಟರ್ ನಿರ್ಮಾಣ ಮಾಡಬೇಕು ಎಂಬುದು ಮೀನುಗಾರರ ಪ್ರಮುಖ ಬೇಡಿಕೆಯಾಗಿದೆ. ಈ ಕುರಿತು ಗಮನಹರಿಸಲಾಗುವುದು. ಕೇರಳ ಮಾದರಿಯಲ್ಲಿ ತಡೆಗೋಡೆ ನಿರ್ಮಿಸುವ ಸಾಧ್ಯತೆಗಳ ಬಗ್ಗೆಯೂ ಪರಿಶೀಲನೆ ನಡೆಸುವುದಾಗಿ ಸಚಿವರು ಹೇಳಿದರು.
ಅಭಿವೃದ್ಧಿ ಕಾರ್ಯಗಳಲ್ಲಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಮುಂದುವರಿಯಲಾಗುವುದು. ಕರಾವಳಿಯ ಅಗತ್ಯತೆಗಳು ಹಾಗೂ ಸಮಸ್ಯೆಗಳಿಗೆ ಆದ್ಯತೆ ನೀಡಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

