ಉಡುಪಿ: ಆದಿಉಡುಪಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ನಡೆಯುತ್ತಿರುವ ಅವ್ಯವಸ್ಥೆಯನ್ನು ಖಂಡಿಸಿ ಹಾಗೂ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಆದಿಉಡುಪಿ ಎಪಿಎಂಸಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವರ್ತಕರು ಎಪಿಎಂಸಿ ಕಚೇರಿ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಎಪಿಎಂಸಿ ಆವರಣದಲ್ಲಿನ ಅವ್ಯವಸ್ಥೆ ವಿರುದ್ಧ ವರ್ತಕರು ಆಕ್ರೋಶ ವ್ಯಕ್ತಪಡಿಸಿದರು. ದಲಿತ ವರ್ತಕರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ದೂರಿದರು. ವರ್ತಕ ಜಲ್ಲುರೆ ಮಾತನಾಡಿ, ಎಪಿಎಂಸಿ ಆವರಣದಲ್ಲಿ ಯಾವುದೇ ಪರವಾನಗಿ ಪಡೆಯದೆ ಮರಗಳನ್ನು ಕಡಿದಿದ್ದಾರೆ. ಇಂಟರ್ ಲಾಕ್, ಶೆಡ್ ಗಳನ್ನು ಧ್ವಂಸಗೊಳಿಸಿದ್ದಾರೆ. ಎಸ್ ಸಿ, ಎಸ್ ಟಿ ಪಂಗಡದವರಿಗೆ ಸೇರಿದ ಜಾಗವನ್ನು ಮಾರಾಟ ಮಾಡಿದ್ದಾರೆ.

ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಯಾವುದೇ ಉತ್ತರ ನೀಡುತ್ತಿಲ್ಲ. ದಲಿತ ವರ್ತಕರಿಗೆ ನ್ಯಾಯ ಸಿಗುತ್ತಿಲ್ಲ. ಹೀಗಾಗಿ ನಾವು ಪ್ರತಿಭಟನೆಗೆ ಇಳಿದಿದ್ದೇವೆ. ನ್ಯಾಯ ಸಿಗದಿದ್ದರೆ ದೊಡ್ಡಮಟ್ಟ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸಾಮಾಜಿಕ ಹೋರಾಟಗಾರ ವಿಜಯ ಕೊಡವೂರು ಮಾತನಾಡಿ, ಆದಿಉಡುಪಿ ಎಪಿಎಂಸಿ ಆವರಣದ ಬೆಲೆಬಾಳುವ ಜಾಗವನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿದ್ದಾರೆ. ಇಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಯಾವುದೇ ಪರವಾನಗಿ ಪಡೆಯದೆ ಬೆಲೆಬಾಳುವ ಮರಗಳನ್ನು ಕಡಿದು ಸಾಗಾಟ ಮಾಡಲಾಗುತ್ತಿದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.
ಅಧಿಕಾರಿಗಳು ನಡೆಸುತ್ತಿರುವ ಅನ್ಯಾಯದ ವಿರುದ್ಧ ವರ್ತಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರೊಂದಿಗೆ ಕೃಷಿಕರು, ಸ್ಥಳೀಯರು ಬೆಂಬಲ ನೀಡಿದ್ದಾರೆ. ಈ ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

