ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಮತ್ತು ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚ, ಭ್ರಷ್ಟಾಚಾರ ಹೆಚ್ಚುತ್ತಿದ್ದು, ಸ್ವಜನಪಕ್ಷಪಾತ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿದರು.
ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಕಾಂಗ್ರೆಸ್ ಶಾಸಕರೇ ಬಹಿರಂಗಗೊಳಿಸುತ್ತಿದ್ದಾರೆ. ರಾಜ್ಯ ಸರ್ಕಾರ ಇದುವರೆಗೂ ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಕೆರೆ ಕಟ್ಟೆಗಳ ಪುನಶ್ಚೇತನ, ಒಳಚರಂಡಿ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮುಂತಾದವುಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೇವಲ ತುಷ್ಠೀಕರಣ ರಾಜಕಾರಣ ಮಾಡುತ್ತಿದ್ದು, ರಾಜ್ಯದ ಜನರಿಗೆ ಘನಘೋರ ಅನ್ಯಾಯ ಎಸಗಿದೆ.
ರಾಜ್ಯ ಸರ್ಕಾರ ಕಳೆದ 2 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ ಜನರನ್ನು ವಂಚಿಸುತ್ತಿದೆ ಎಂದು ದೂರಿದರು. ಭ್ರಷ್ಟಾಚಾರ ಹೊತ್ತಿರುವ ಸಚಿವ ಜಮೀರ್ ಅಹಮದ್ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಕಾರ್ಯಾಧ್ಯಕ್ಷ ವಾಸುದೇವ ರಾವ್, ರಾಜ್ಯ ಕಾರ್ಯದರ್ಶಿ ಸುಧಾಕರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಮಾಜಿ ಜಿಲ್ಲಾಧ್ಯಕ್ಷ ದಕ್ಷತ್ ಶೆಟ್ಟಿ, ರಾಜ್ಯ ಕಾರ್ಯದರ್ಶಿ ಗಂಗಾಧರ ಬಿರ್ತಿ, ಉದಯ ಹೆಗ್ಡೆ, ನಾಯಕರುಗಳಾದ ಚಂದ್ರಹಾಸ ಎರ್ಮಾಳ್, ಬ್ಲಾಕ್ ಅಧ್ಯಕ್ಷರುಗಳಾದ ಸಂದೇಶ್ ಭಟ್, ಶ್ರೀಕಾಂತ್ ಹೆಬ್ರಿ, ದೇವರಾಜ್ ತೊಟ್ಟಂ, ಯುವ ಜನತಾದಳ ಅಧ್ಯಕ್ಷ ಸಂಜಯ್ ಕುಮಾರ್ ಉಪಸ್ಥಿತರಿದ್ದರು.

