ಲಕ್ನೋ: ಉತ್ತರಪ್ರದೇಶದ ಸಹರಾನ್ ಪುರ್ ಜಿಲ್ಲೆಯಲ್ಲಿ ರೈತರ ಮಹಾಪಂಚಾಯತ್ ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ 144 ಸೆಕ್ಷನ್ ಜಾರಿಗೊಳಿಸಿದ್ದು, ಕೋವಿಡ್ ವೈರಸ್ ಹರಡದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಈ ಕಾರ್ಯವನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬರುವ ಹಬ್ಬ, ಕೋವಿಡ್ ಸೋಂಕು, ಸಮಾಜಘಾತುಕ ಶಕ್ತಿಗಳ ಹಿಂಸಾಚಾರ ತಡೆಯುವ ನಿಟ್ಟಿನಲ್ಲಿ ಸಹರಾನ್ ಪುರ್ ನಲ್ಲಿ ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶದಲ್ಲಿ ತಿಳಿಸಿದ್ದಾರೆ.
ಕಿಸಾನ್ ಮಹಾಪಂಚಾಯತ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸಲಿದ್ದಾರೆ. “ನಾನು ಇಂದು ಸಹರಾನ್ ಪುರ್ ನಲ್ಲಿ ಇದ್ದು ರೈತರ ಸಮಸ್ಯೆಗಳನ್ನು ಆಲಿಸುತ್ತೇನೆ. ಹಾಗೂ ಬಿಜೆಪಿ ನೇತೃತ್ವದ ಸರ್ಕಾರ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯಬೇಕಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.