ಲಂಡನ್: ಇಲ್ಲಿನ ಉತ್ತರ ಭಾಗದಲ್ಲಿರುವ ಬೆಡ್‌ಫೋರ್ಡ್ ಪ್ರದೇಶದಲ್ಲಿ ಶುಕ್ರವಾರ ಎರಡು ರೈಲುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ರೈಲು ಚಾಲಕ ಸಾವನ್ನಪ್ಪಿದ್ದು, 80ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಗಾಯಗೊಂಡವರು ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 11 ಜನರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಲಂಡನ್‌ನಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿರುವ ಬೆಡ್‌ಫೋರ್ಡ್ ಪಟ್ಟಣದ ಹೊರವಲಯದಲ್ಲಿ ಸಂಜೆ 5:15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಸೇಂಟ್ ಪ್ಯಾಂಕ್ರಸ್ ನಿಲ್ದಾಣದ ಕಡೆಗೆ ಚಲಿಸುತ್ತಿದ್ದ ಒಂದು ರೈಲು ಮತ್ತು ಪ್ಯಾಂಕ್ರಸ್ ಕಡೆಯಿಂದ ಲಂಡನ್‌ನತ್ತ ತೆರಳುತ್ತಿದ್ದ ಮತ್ತೊಂದು ರೈಲು ಒಂದಕ್ಕೊಂದು ಡಿಕ್ಕಿ ಹೊಡೆದಿವೆ ಎಂದು ರೈಲು ಟ್ರ್ಯಾಕಿಂಗ್ ವೆಬ್‌ಸೈಟ್ ಮಾಹಿತಿ ನೀಡಿವೆ.
ಅಪಘಾತದ ತೀವ್ರತೆಗೆ ಪ್ರಯಾಣಿಕರು ಸೀಟುಗಳಿಂದ ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಹಲವರಿಗೆ ಕೈಕಾಲುಗಳಿಗೆ ಪೆಟ್ಟಾಗಿದ್ದು ಮೂಳೆಗಳು ಮುರಿದಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಈ ರೈಲು ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ದುರದೃಷ್ಟವಶಾತ್ ಒಬ್ಬರು ಸಾವನ್ನಪ್ಪಿದ್ದಾರೆ. ಪರಿಸ್ಥಿತಿಯನ್ನು ಮನಗಂಡು ಈ ಪ್ರದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಬೆಡ್‌ಫೋರ್ಡ್‌ಶೈರ್ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಕ್ಕೆ ನೆರವಾಗಿದ್ದಾರೆ.
ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ, ರಕ್ಷಣಾ ಪಡೆ ಯೋಧರು ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದರು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

