ತೆಹ್ರಿ ಗರ್ವಾಲ್ : ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಋಷಿಕೇಶ-ಬದ್ರಿನಾಥ್ ಹೆದ್ದಾರಿಯ ಗುಲಾರ್ ಬಜಾರ್ ಬಳಿ ಪ್ರಯಾಣಿಕರಿದ್ದ ಬಸ್ ನಿಯಂತ್ರಣ ತಪ್ಪಿ ಸೇತುವೆಯ ಮೇಲಿನಿಂದ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.

ಈ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಇತರ 20 ಮಂದಿ ಗಾಯಗೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡಗಳು ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿವೆ. ಬ್ಯಾಸಿ ಮತ್ತು ಧಲ್ವಾಲಾ ಎಸ್‌ಡಿಆರ್‌ಎಫ್ ತಂಡಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ.

ಎಸ್‌ಡಿಆರ್‌ಎಫ್ ಕಮಾಂಡರ್ ಅರ್ಪಣ್ ಯದುವಂಶಿ ಅವರ ಸೂಚನೆಯ ಮೇರೆಗೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಹೆಚ್ಚುವರಿ ತಂಡಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ. ಪ್ರಸ್ತುತ ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆ ಬೀಡುಬಿಟ್ಟಿದ್ದು, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.