News Karnataka Kannada
Monday, May 06 2024
ದೇಶ

ವಿದೇಶೀ ಲಸಿಕೆ ಕೊವ್ಯಾಕ್ಸ್‌ ಆಗಸ್ಟ್‌ ನಲ್ಲಿ ಭಾರತದಲ್ಲಿ ಲಭ್ಯ

Covax America 8 7 21
Photo Credit :

ನವದೆಹಲಿ, : ಭಾರತದಲ್ಲಿ ಅನುಮೋದನೆ ಪಡೆದಿರುವ ಕೊರೊನಾವೈರಸ್ ವಿದೇಶಿ ಲಸಿಕೆಯಾದ ಕೊವ್ಯಾಕ್ಸ್ ಜಾಗತಿಕ ಲಸಿಕೆ ಹಂಚಿಕೆ ಯೋಜನೆ ಅಡಿ ಆಗಸ್ಟ್ ತಿಂಗಳಿನಲ್ಲಿ ಭಾರತಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ರಾಯಟರ್ಸ್ ಸುದ್ದಿ ಸಂಸ್ಥೆಯು ವರದಿ ಮಾಡಿದೆ.
ರಾಯಟರ್ಸ್ ಸಂಸ್ಥೆ ವರದಿ ಪ್ರಕಾರ, 30 ರಿಂದ 40 ಲಕ್ಷ ಡೋಸ್ ಮಾಡರ್ನಾ ಮತ್ತು ಫೈಜರ್ ಸಂಸ್ಥೆಯ ಕೊವಿಡ್-19 ಲಸಿಕೆಯು ಆಗಸ್ಟ್ ತಿಂಗಳಿನಲ್ಲಿ ಭಾರತಕ್ಕೆ ತಲುಪಲಿದೆ. ಅಮೆರಿಕಾದಲ್ಲಿ ಉತ್ಪಾದಿಸಲಾಗುತ್ತಿರುವ ಕೊವ್ಯಾಕ್ಸ್ ಲಸಿಕೆಯನ್ನು ಈ ತಿಂಗಳ ಆರಂಭದಲ್ಲಿ ಭಾರತಕ್ಕೆ ರವಾನಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕೊವ್ಯಾಕ್ಸ್ ಲಸಿಕೆಯನ್ನು ಶೀಘ್ರದಲ್ಲಿ ಭಾರತಕ್ಕೆ ತಲುಪಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಜೊತೆಗೆ COVAX ಲಸಿಕೆ ಒಕ್ಕೂಟ GAVI ವಕ್ತಾರರು ತಿಳಿಸಿದ್ದಾರೆ. ಎಲ್ಲ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಭಾರತಕ್ಕೆ ಲಸಿಕೆಯನ್ನು ಸರಬರಾಜು ಮಾಡಲಾಗುತ್ತದೆ ಎಂದು ತಿಳಿಸಿದೆ.
ಜಗತ್ತಿನಲ್ಲಿ ಅತಿಹೆಚ್ಚು ಕೊರೊನಾವೈರಸ್ ಲಸಿಕೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಕೊವಿಡ್-19 ಆರಂಭಿಕ ಹಂತದಲ್ಲಿ ಉತ್ಪಾದಿಸಲಾದ ಲಸಿಕೆಯನ್ನು ನೆರೆಯ ಮತ್ತು ಮಿತ್ರರಾಷ್ಟ್ರಗಳಿಗೆ ಉಚಿತವಾಗಿ ರಫ್ತು ಮಾಡಿತ್ತು. ಒಟ್ಟು 66 ದಶಲಕ್ಷ ಡೋಸ್ ಲಸಿಕೆಯನ್ನು ಭಾರತದಿಂದ ರಫ್ತು ಮಾಡಲಾಗಿತ್ತು. ಆದರೆ ಏಪ್ರಿಲ್ ತಿಂಗಳಿನಲ್ಲಿ ಕೊರೊನಾವೈರಸ್ ಅಲೆ ಹೆಚ್ಚಾದ ಹಿನ್ನೆಲೆ ಲಸಿಕೆ ರವಾನೆಯನ್ನು ನಿಲ್ಲಿಸಿತ್ತು. ಕಳೆದ ಜೂನ್ ತಿಂಗಳಿನಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದ ಅಧ್ಯಕ್ಷ ಜೋ ಬೈಡನ್ ಜಗತ್ತಿನ ಬಡರಾಷ್ಟ್ರಗಳಿಗೆ 500 ದಶಲಕ್ಷ ಡೋಸ್ ಕೊರೊನಾವೈರಸ್ ಲಸಿಕೆಯನ್ನು ಉಚಿತವಾಗಿ ರಫ್ತು ಮಾಡುವುದಾಗಿ ಘೋಷಿಸಿದ್ದರು. ಲಸಿಕೆ ರಫ್ಟಿನ ಕುರಿತು ಫೈಜರ್ ಕಂಪನಿ ಮತ್ತು ಮಾಡರ್ನಾ ಕಂಪನಿಗಳು ಯಾವುದೇ ರೀತಿ ಪ್ರತಿಕ್ರಿಯೆ ನೀಡಿಲ್ಲ. ವಿದೇಶಾಂಗ ಸಚಿವಾಲಯ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.
ಭಾರತದಲ್ಲಿ ಜಾನ್ಸನ್ ಆಂಡ್ ಜಾನ್ಸನ್ ಕಂಪನಿಯ ಕೊರೊನಾವೈರಸ್ ಲಸಿಕೆಯನ್ನು ನೀಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಭಾರತದ ಬಯೋಲಜಿಕಲ್ ಇ ಲಿಮಿಟೆಡ್ ಕಂಪನಿ ಜೊತೆ ಜಾನ್ಸನ್ ಆಂಡ್ ಜಾನ್ಸನ್ ಕಂಪನಿಯು ಲಸಿಕೆ ಉತ್ಪಾದನೆ ಕುರಿತು ಒಪ್ಪಂದಕ್ಕೆ ಸಹಿ ಹಾಕಿದ್ದು, ಉತ್ಪಾದನೆ ಇನ್ನಷ್ಟೇ ಶುರು ಆಗಬೇಕಿದೆ. ಭಾರತದಲ್ಲಿ ಕೊವಿಡ್-19 ಲಸಿಕೆ ಸರಬರಾಜನ್ನು ಚುರಕುಗೊಳಿಸಲಾಗುವುದು ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ. ಭಾರತದಲ್ಲಿ ಒಟ್ಟು ನಾಲ್ಕು ಕಂಪನಿಗಳ ಕೊರೊನಾವೈರಸ್ ಲಸಿಕೆಯ ವಿತರಣೆಗೆ ಅನುಮೋದನೆ ನೀಡಲಾಗಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್, ರಷ್ಯಾದಲ್ಲಿ ಸಂಶೋಧಿಸಿ ಭಾರತದ ರೆಡ್ಡೀಸ್ ಕಂಪನಿ ಜೊತೆಗಿನ ಸಹಭಾಗಿತ್ವದಲ್ಲಿ ಉತ್ಪಾದನೆ ಆಗುತ್ತಿರುವ ಸ್ಪುಟ್ನಿಕ್-ವಿ ಹಾಗೂ ಮಾಡೆರ್ನಾ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ವೈದ್ಯಕೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಅನುಮೋದನೆ ನೀಡಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ವಿರುದ್ಧ ಹೋರಾಟಕ್ಕೆ ಲಸಿಕೆ ಅಭಿಯಾನ ಆರಂಭಿಸಿ 173 ದಿನಗಳೇ ಕಳೆದಿವೆ. ಜನವರಿ 16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಲಸಿಕೆ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದರು. ದೇಶದಲ್ಲಿ ಬುಧವಾರ ರಾತ್ರಿ 7 ಗಂಟೆ ವೇಳೆಗೆ 31,04,426 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 36,48,47,549 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.
18 ರಿಂದ 44 ವಯೋಮಾನದ 14,04,816 ಜನರಿಗೆ ಮೊದಲ ಡೋಸ್ ಹಾಗೂ 1,35,166 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ ಇದೇ ವಯೋಮಾನದ 10,62,08,106 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ31,88,078 ಜನರಿಗೆ ಎರಡನೇ ಡೋಸ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು