ಪಾಟ್ನಾ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿವೆ.
ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಪ್ರತಿಪಕ್ಷಗಳ ಸುದೀರ್ಘ ಸಭೆಯ ನಂತರ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರು, ಸಭೆಯಲ್ಲಿ 17 ಪಕ್ಷಗಳ ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಾಯಕರು ಒಟ್ಟಾಗಿ ಹೋರಾಡುವ ಯೋಜನೆಗೆ ಅಂತಿಮ ರೂಪ ನೀಡಲಾಗುವುದು ಎಂದು ಹೇಳಿದರು.
ನಾವು ಉತ್ತಮ ಸಭೆ ನಡೆಸಿದ್ದೇವೆ ಮತ್ತು ಸಭೆಯಲ್ಲಿ ಹಲವಾರು ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. 17 ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಮತ್ತು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿವೆ” ಎಂದು ಬಿಹಾರ ಸಿಎಂ ತಿಳಿಸಿದ್ದಾರೆ.
ನಾವು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ದೇಶದ ಇತಿಹಾಸವನ್ನು ತಿರುಚಲು ಪ್ರಯತ್ನಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನಿತೀಶ್ ಕುಮಾರ್ ಆರೋಪಿಸಿದರು.
ಮುಂದಿನ ತಿಂಗಳು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಪ್ರತಿಪಕ್ಷ ನಾಯಕರ ಮುಂದಿನ ಸಭೆ ನಡೆಯಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.
ಸಾಮಾನ್ಯ ಕಾರ್ಯಸೂಚಿ ಸಿದ್ಧಪಡಿಸಲು ನಿರ್ಧರಿಸಿದ್ದು, ಮುಂದಿನ ಸಭೆಯಲ್ಲಿ ಯಾವ ರೀತಿ ಮುನ್ನಡೆಯಬೇಕು ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಖರ್ಗೆ ತಿಳಿಸಿದ್ದಾರೆ.