ನವದೆಹಲಿ: ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆ ಕಲಾಪದ ವೇಳೆ ಈ ವಿಚಾರ ಪ್ರಸ್ತಾಪಿಸಿದ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ಆದಾಗ್ಯೂ, ಲೋಕಸಭೆ ಸಂಸದ (ಡಿ.ಕೆ.ಸುರೇಶ್) ಹಾಗೆ ಹೇಳಬಾರದು ಎಂದು ಹೇಳಿದ್ದು, ಅದನ್ನು ಚರ್ಚಿಸಬಾರದು ಎಂದು ಹೇಳಿದರು.
ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ‘ಪ್ರತ್ಯೇಕ ದೇಶ’ ಹೇಳಿಕೆಯನ್ನು ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು.
ಕೇಂದ್ರದ ಮಧ್ಯಂತರ ಬಜೆಟ್ ಟೀಕಿಸುವ ಭರದಲ್ಲಿ ಡಿಕೆ ಸುರೇಶ್ ಗುರುವಾರ ನೀಡಿದ್ದ ಪ್ರತ್ಯೇಕ ರಾಷ್ಟ್ರ ಹೇಳಿಕೆ ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಕರ್ನಾಟಕದಲ್ಲಿ ಬಿಜೆಪಿ ನಾಯಕರು ಡಿಕೆ ಸುರೇಶ್ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಏನು ಹೇಳಿದ್ದರು ಡಿಕೆ ಸುರೇಶ್?
ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ಡಿಕೆ ಸುರೇಶ್, ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಹೊಸತೇನನ್ನೂ ಕೊಟ್ಟಿಲ್ಲ. ಕೇಂದ್ರ ಸರ್ಕಾರವು ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆಯೇ ಅನ್ಯಾಯ ಆಗುತ್ತಿದ್ದರೆ ನಾವು ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ. ದಕ್ಷಿಣ ಭಾರತದವರು ಧ್ವನಿ ಎತ್ತಬೇಕಾಗುತ್ತದೆ ಎಂದು ಹೇಳಿದ್ದರು.