ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಲೋಕಸಭಾ ಚುನಾವಣೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಮಹತ್ವದ ಮಾತುಕತೆ ನಡೆಸಿದರು.
ಬುಧವಾರ (ಜ. 17) ರಂದು ಸಂಜೆ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮೈತ್ರಿಯ ವಿಷಯವೂ ಸೇರಿ ರಾಜ್ಯ ರಾಜಕೀಯದ ಬಗ್ಗೆ ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ದೀರ್ಘ ಸಮಾಲೋಚನೆ ನಡೆಸಿದ್ದಾರೆ.
ಆಗ ಅಮಿತ್ ಶಾ ಅವರು, ಕ್ಷೇತ್ರ ಹಂಚಿಕೆಯ ಸೇರಿದಂತೆ ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್ ಡಿ ಎ ಮೈತ್ರಿಕೂಟಕ್ಕೆ ಸೇರುವ ಪ್ರಕ್ರಿಯೆಗಳನ್ನು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಕೂತು ಚರ್ಚೆ ನಡೆಸಿದ ನಂತರ ಅಂತಿಮಗೊಳಿಸೋಣ ಎಂದು ಹೆಚ್ಡಿಕೆಗೆ ತಿಳಿಸಿದ್ದಾರೆ.
ರಾಜ್ಯದ 28 ಲೋಕಸಭೆ ಕ್ಷೇತ್ರಗಳೆಲ್ಲವನ್ನೂ ಎನ್ ಡಿ ಎ ಮೈತ್ರಿಕೂಟ ಗೆದ್ದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಭಾರತದ ಪ್ರಧಾನಮಂತ್ರಿ ಆಗಬೇಕು. ಅದಕ್ಕಾಗಿ ಕರ್ನಾಟಕದಲ್ಲಿ ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಒಟ್ಟಾಗಿ ಮಾಡೋಣ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ಅತ್ಯಂತ ವಿಶ್ವಾಸ, ನಂಬಿಕೆಯ ಆಧಾರದ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ಧಾರಗಳನ್ನು ಮಾಡೋಣ ಎಂದು ಶಾ ಅವರು ಕುಮಾರಸ್ವಾಮಿಗೆ ತಿಳಿಸಿದ್ದಾರೆ.
ಈ ಸಭೆಯಲ್ಲಿ ಗೃಹ ಸಚಿವರ ಜತೆ ಎಲ್ಲಾ ವಿಷಯಗಳನ್ನು ಮುಕ್ತವಾಗಿ ಚರ್ಚೆ ಮಾಡಿದ್ದೇನೆ. ಕೇಂದ್ರದಲ್ಲಿ ಎನ್ ಡಿ ಎ ಮೈತ್ರಿಕೂಟ ಅಧಿಕಾರಕ್ಕೆ ಬಂದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದರು.
ಈ ಸಂಧರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳ ಜೊತೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಉಪಸ್ಥಿತರಿದ್ದರು.
ಕೇಂದ್ರದ ಗೃಹ ಮಂತ್ರಿಗಳಾದ ಮಾನ್ಯ ಶ್ರೀ @AmitShah ರವರು ಹಾಗೂ @BJP4India ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಶ್ರೀ @JPNadda ಅವರೊಂದಿಗೆ ಜೆಡಿಎಸ್ – ಬಿಜೆಪಿ ಮೈತ್ರಿ, ಮುಂಬರುವ ಲೋಕಸಭೆ ಚುನಾವಣೆ ತಯಾರಿ ಸೇರಿದಂತೆ ಇನ್ನಿತರೆ ಹಲವಾರು ಮಹತ್ವದ ವಿಷಯಗಳ ಬಗ್ಗೆ ನವದೆಹಲಿಯಲ್ಲಿ ಇಂದು ಸಂಜೆ ಸುದೀರ್ಘವಾಗಿ, ಮುಕ್ತವಾಗಿ ಸಮಾಲೋಚನೆ… pic.twitter.com/NcEnJXhRXX
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 17, 2024