ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂಸತ್ ಸ್ಥಾನದ ಅನರ್ಹತೆಯನ್ನ ಲೋಕಸಭೆಯ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ವಾಪಸ್ ಪಡೆದಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ಸಂಸದೀಯ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಶುಕ್ರವಾರ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸ್ಪೀಕರ್ ಈ ನಿರ್ಧಾರ ಕೈಗೊಂಡಿದ್ದಾರೆ.
ಮಾನನಷ್ಟ ಪ್ರಕರಣದಲ್ಲಿ ಸೂರತ್ ಜಿಲ್ಲಾ ನ್ಯಾಯಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬಳಿಕ ಜನಪ್ರತಿನಿಧಿ ಕಾಯ್ದೆಯಡಿ ಕಳೆದ ಮಾರ್ಚ್ ನಲ್ಲಿ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಲಾಗಿತ್ತು.
ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಸುಪ್ರೀಂ ಆದೇಶ ಬೆನ್ನಲ್ಲೇ ಸೋಮವಾರ ಲೋಕಸಭೆಯ ಸ್ಪೀಕರ್ ಸದಸ್ಯತ್ವವನ್ನ ಮರಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭೆ ಅಧಿವೇಶನಕ್ಕೆ ಹಾಜರಾಗಬಹುದಾಗಿದೆ.