ನವದೆಹಲಿ: ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡುವಂತೆ ಎಲ್ಲಾ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಕೊರೊನಾದ ಹೊಸ ರೂಪಾಂತರಿ ಜೆಎನ್1 ಮತ್ತು ಇನ್ಫ್ಲುಯೆನ್ಜಾ ಸೇರಿದಂತೆ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದೆ.
ಕೇರಳದಲ್ಲಿ ಮೊದಲ ಪ್ರಕರಣ ವರದಿಯಾದ ನಂತರ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳಲ್ಲಿ ಏರಿಕೆಯಾಗಿದೆ . ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡುವಂತೆ ಸೂಚನೆ ನೀಡಿದೆ.
ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್ ಮತ್ತೆ ಭೀತಿ ಹುಟ್ಟಿಸಿದೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 350-400 ಟೆಸ್ಟ್ ನಡೆಸುತ್ತಿದ್ದು 1000 ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ.