ಶ್ರೀನಗರ, ನ.11: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ನಡೆಸಿದ ಎನ್ಕೌಂಟರ್ ನಲ್ಲಿ ಜೈಷ್-ಇ-ಮೊಹಮ್ಮದ್ (ಜೆಎಂ) ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಶುಕ್ರವಾರ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ಕುಲ್ಗಾಮ್-ಶೋಪಿಯಾನ್ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಕಮ್ರಾನ್ ಭಾಯ್ ಅಲಿಯಾಸ್ ಹನೀಸ್ ಎಂದು ಗುರುತಿಸಲಾದ ಜೆಇಎಂ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಇನ್ನೂ ಶೋಧ ಮುಂದುವರಿದಿದೆ” ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾಶ್ಮೀರ ವಲಯ) ವಿಜಯ್ ಕುಮಾರ್ ಅವರನ್ನು ಉಲ್ಲೇಖಿಸಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಶೋಪಿಯಾನ್’ನ ಕಾಪ್ರೆನ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದೆ ಸೇನಾಪಡೆ ಎನ್ಕೌಂಟರ್ ಆರಂಭಿಸಿ ಇದೀಗ ಓರ್ವ ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.