ರೇವಾ : ನಾಲ್ಕು ವರ್ಷದ ಬಾಲಕಿ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ಸಂಜೆ ಘಟನೆ ನಡೆದಿದ್ದು, ಈ ಸಂಬಂಧ 22 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ. ‘ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆಮಿಷ ತೋರಿಸಿ ತನ್ನ ಮನೆಗೆ ಕರೆದುಕೊಂಡು ಬಂದ ಆರೋಪಿ, ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ನೋವಿನಿಂದ ಅಳುತ್ತಾ ಮನೆಗೆ ಬಂದಿದ್ದಾಳೆ. ಬಳಿಕ ಆಕೆಯ ಪೋಷಕರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ’ ಎಂದು ಪೊಲೀಸ್ ಇನ್ಸ್ಪೆಕ್ಟರ್ ದಿಲೀಪ್ ದಹಿಯಾ ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು, ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಮತ್ತು ಪೊಕ್ಸೊ ಪ್ರಕರಣ ದಾಖಲಾಗಿದೆ.
ಸದ್ಯ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಮಕ್ಕಳ ವಿಭಾಗದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಲಕಿ ಅಪಾಯದಿಂದ ಪಾರಾಗಿದ್ದಾಳೆ ಎಂದು ಆಸ್ಪತ್ರೆಯ ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಡಾ. ಅತುಲ್ ಸಿಂಗ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.