ಇಂಫಾಲ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿ ಹಲವು ಸುತ್ತುಗಳ ಗುಂಡುಗಳನ್ನು ಹಾರಿಸಲಾಗಿದ್ದು, ಕನಿಷ್ಠ 2 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಪಟ್ಸೋಯಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಕೀಥೆಲ್ಮನ್ಬಿಯಲ್ಲಿ ಘಟನೆ ಸಂಭವಿಸಿದೆ. ದಾಳಿಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಭದ್ರತಾ ಪಡೆಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಇನ್ನು ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾಗಿದ್ದು, ಅಂದಿನಿಂದ ಹಿಂಸಾಚಾರದಲ್ಲಿ 180 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಸಹ ಈ ಹಿಂಸಾಚಾರ ಕಡಿಮೆಯಾಗಿಲ್ಲ.