ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಇಂದು ದಿಢೀರ್ ಬೆಳವಣಿಗೆವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಸುಮಾರು 1 ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದರು.
ಕಾಂಗ್ರೆಸ್ನಲ್ಲಿ ತಮಗೆ ಅವಮಾನವಾಗಿದೆ ಎಂದು ಹೇಳಿಕೊಂಡಿದ್ದ ಸಿಂಗ್, ನೇರವಾಗಿ ನವಜೋತ್ ಸಿಂಗ್ ಸಿಧು ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಮೂಲಕ ತಾವು ಬೇರೆ ಪಕ್ಷಕ್ಕೆ ಸೇರಿಕೊಳ್ಳುವ ಮುನ್ಸೂಚನೆ ನೀಡಿದ್ದರು.
ಇದರ ಬೆನ್ನಲ್ಲೇ ಇಂದು ಅಮಿತ್ ಶಾ ಭೇಟಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಯಾವ ಕಾರಣಕ್ಕಾಗಿ ಭೇಟಿಯಾಗಿದ್ದಾರೆಂಬುದರ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಅಮಿತ್ ಶಾ ಭೇಟಿ ಮಾಡಿ ಮಾತುಕತೆ ನಡೆಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಅಮರೀಂದರ್ ಸಿಂಗ್ ಟ್ವೀಟ್ ಮಾಡಿದ್ದು, ರೈತರ ಸಮಸ್ಯೆ ಹಾಗೂ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ಬಗ್ಗೆ ಈ ವೇಳೆ ಚರ್ಚಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಅಮಿತ್ ಶಾ ಅವರನ್ನು ಭೇಟಿ ಮಾಡಿ, ಕೃಷಿ ಕಾಯ್ದೆ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಹೊಸ ಕಾನೂನು ರದ್ಧುಗೊಳಿಸುವುದರೊಂದಿಗೆ ರೈತರ ಸಮಸ್ಯೆ ತುರ್ತಾಗಿ ಬಗೆಹರಿಸುವಂತೆ ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ.