ಚೆನ್ನೈ: ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ, ರಸ್ತೆಗಳು ಜಲಾವೃತವಾಗಿವೆ. ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.
ಚೆನ್ನೈ ಮತ್ತು ದಕ್ಷಿಣದ ಜಿಲ್ಲೆಗಳು, ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಶುಕ್ರವಾರ ಮತ್ತು ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಸೋಮವಾರ ಬೆಳಿಗ್ಗೆ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ತಿಳಿಸಿದೆ.