ಹೈದರಾಬಾದ್: ಆಟೋ ರಿಕ್ಷಾ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮಹಿಳಾ ಕಾರ್ಮಿಕರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ನಡೆದಿದೆ.
ಹೈದರಾಬಾದ್ ನಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಚೌಟುಪ್ಪಲ್ ನ ದಂಡುಮ್ಲಕ್ಪುರ್ ಕೈಗಾರಿಕಾ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ.
ಮಹಿಳಾ ಕಾರ್ಮಿಕರು ಪ್ರಯಾಣಿಸುತ್ತಿದ್ದ ಆಟೋರಿಕ್ಷಾ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ತಿರದ ಹಳ್ಳಿಯ ಮಹಿಳೆಯರು ಕೆಲಸಕ್ಕಾಗಿ ಕೈಗಾರಿಕಾ ಪ್ರದೇಶಕ್ಕೆ ಹೋಗುತ್ತಿದ್ದರು. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಹೈದರಾಬಾದಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ವಿ.ಅನಸೂಯ (55), ಡಿ.ನಾಗಲಕ್ಷ್ಮಿ (28), ಡಿ.ಶ್ರೀಸಿಂಹ (30) ಮತ್ತು ಸಿ.ಧನಲಕ್ಷ್ಮಿ (35) ಎಂದು ಗುರುತಿಸಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಂಗಾರೆಡ್ಡಿ ಜಿಲ್ಲೆಯ ಮೊಯಿನಾಬಾದ್ ನಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ, ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಡಿಕ್ಕಿ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.