ಮಥುರಾ: ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸಜೀವ ದಹನವಾಗಿದ್ದಾರೆ.
ಮೃತರು ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
40 ಜನರಿದ್ದ ಸ್ಲೀಪರ್ ಕೋಚ್ ಬಸ್ ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ಗೆ ಡಿಕ್ಕಿ ಹೊಡೆದ ನಂತರ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಕಾರಿನಲ್ಲಿದ್ದ ಐವರು ಸುಟ್ಟು ಕರಕಲಾಗಿದ್ದಾರೆ. ಬಸ್ ಬಿಹಾರದಿಂದ ದೆಹಲಿ ಕಡೆಗೆ ಚಲಿಸುತ್ತಿತ್ತು.
ಅಪಘಾತ ಸಂಭವಿಸುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಎರಡೂ ವಾಹನಗಳು ಅಗ್ನಿಗೆ ಆಹುತಿಯಾಗಿವೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ.
ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಕಾರಿನೊಳಗೆ ಸಜೀವ ದಹನವಾಗಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯಲ್ಲಿ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ನೆರವು ನೀಡುವಂತೆ ಸೂಚಿಸಿದ್ದಾರೆ.