ಕೋಲ್ಕತಾ: ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿಯನ್ನು ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸತತ 27 ಗಂಟೆಗಳ ವಿಚಾರಣೆ ನಂತರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳಗ್ಗೆ ಬಂಧಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 10-30ಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಟರ್ಜಿಯನ್ನು ಹಗಲು, ರಾತ್ರಿ ವಿಚಾರಣೆಗೊಳಪಡಿಸಿದ ನಂತರ ಶನಿವಾರ ಬೆಳಗ್ಗೆ 10ಗಂಟೆಗೆ ಬಂಧಿಸಿರುವುದಾಗಿ ಮೂಲಗಳು ಹೇಳಿವೆ.
ಸಚಿವ ಪಾರ್ಥ ಚಟರ್ಜಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ತಮ್ಮ ವಶಕ್ಕೆ ನೀಡುವಂತೆ ಜಾರಿ ನಿರ್ದೇಶನಾಲಯ ಮನವಿ ಮಾಡಿಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಜಿ ಶಿಕ್ಷಣ ಸಚಿವರಾಗಿದ್ದ ಪಾರ್ಥ ಹಾಲಿ ಕೈಗಾರಿಕಾ ಸಚಿವರಾಗಿದ್ದಾರೆ.
ಈಗಾಗಲೇ ಸಚಿವ ಪಾರ್ಥ ಚಟರ್ಜಿ ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಮನೆಯಲ್ಲಿ 20 ಕೋಟಿ ರೂಪಾಯಿ ಹಣವನ್ನು ಇ.ಡಿ ವಶಪಡಿಸಿಕೊಂಡಿದ್ದು, ಮುಖರ್ಜಿಯನ್ನು ಬಂಧಿಸಿದ್ದಾರೆ.